ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ – ಪುಂಡಲಿಕ ಕಾಂಬಳೆ
ಜಮಖಂಡಿಯಲ್ಲಿ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಹಾಕಿ ಕ್ರೀಡಾಕೂಟಕ್ಕೆ ಚಾಲನೆಜಮಖಂಡಿ:ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುತ್ತದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬಾಗಲಕೋಟೆಯ ಉಪನಿರ್ದೇಶಕ ಪುಂಡಲಿಕ ಕಾಂಬಳೆ ಹೇಳಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬೆಂಗಳೂರು ಹಾಗೂ ಬಾಗಲಕೋಟೆ ಮತ್ತು ತುಂಗಳ ವಿಜ್ಞಾನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ, ಜಮಖಂಡಿ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 21 ಮತ್ತು 22ರಂದು ನಡೆಯುತ್ತಿರುವ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಹಾಕಿ ಕ್ರೀಡಾಕೂಟ-2026ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯಮಟ್ಟದ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಹೊರತರುವ ಮಹತ್ವದ ವೇದಿಕೆಗಳಾಗಿವೆ. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಆದರೆ ಕ್ರೀಡಾಪಟುಗಳು ಶಿಸ್ತು, ಪರಿಶ್ರಮ, ನಿರಂತರ ಅಭ್ಯಾಸ ಹಾಗೂ ಕ್ರೀಡಾ ಮನೋಭಾವವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ ಎಂದು ಹೇಳಿದರು.
ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಎರಡು ದಿನಗಳ ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಬಾಲಕರ 24 ತಂಡಗಳು ಹಾಗೂ ಬಾಲಕಿಯರ 21 ತಂಡಗಳು ಸೇರಿದಂತೆ ಒಟ್ಟು 45 ತಂಡಗಳು ಭಾಗವಹಿಸಿವೆ.
ತುಂಗಳ ವಿಜ್ಞಾನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಜಿ. ಜಹಾಂಗೀರದಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬಾಗಲಕೋಟೆ ಸಹಾಯಕ ನಿರ್ದೇಶಕ ಗುರುಪಾದ ದೂಗನ್ನವರ, ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಕೆ. ಮುರುಗೋಡ, ಜಮಖಂಡಿ ತಾಲೂಕು ಕ್ರೀಡಾ ಸಂಯೋಜಕ ಮನೋಜ ಗಂಗೆಪುತ್ರ, ತುಂಗಳ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಶೋಕ ತುಂಗಳ, ತುಂಗಳ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ ಬಾಗಲಕೋಟೆಯ ಪ್ರಾಚಾರ್ಯ ಪ್ರದೀಪ ಪಾಟೀಲ ಹಾಗೂ ತುಂಗಳ ಪದವಿ ಪೂರ್ವ ಮಹಾವಿದ್ಯಾಲಯ ಹುಲ್ಯಾಳದ ಪ್ರಾಚಾರ್ಯ ವಿಜಯ ಎಸ್. ಕುಲಕರ್ಣಿ ಉಪಸ್ಥಿತರಿದ್ದರು.
ಫೋಟೋ ಶೀರ್ಷಿಕೆ: ಜಮಖಂಡಿಯಲ್ಲಿ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಹಾಕಿ ಕ್ರೀಡಾಕೂಟಕ್ಕೆ ಪುಂಡಲಿಕ ಕಾಂಬಳೆ ಸೇರಿದಂತೆ ಗಣ್ಯರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.


