ಜಮಖಂಡಿ 08:ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ಸ್ವಚ್ಛತೆಯ ಅರಿವು ಮೂಡಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ. ಕಲ್ಲಹಳ್ಳಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಮಾದರಿ ಕಾರ್ಯ ಮಾಡಿದ್ದಾರೆ ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಬಡಿಗೇರ ಹೇಳಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು, ಹುನ್ನೂರಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಕಲ್ಲಹಳ್ಳಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಅಕ್ಟೋಬರ್ 31ರಿಂದ ನವೆಂಬರ್ 6ರವರೆಗೆ ಹಮ್ಮಿಕೊಂಡಿದ್ದ ವಿಶೇಷ ವಾರ್ಷಿಕ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇತ್ತೀಚೆಗೆ ದೇವಸ್ಥಾನದ ಜಾತ್ರಾ ಮಹೋತ್ಸವ ಮುಕ್ತಾಯಗೊಂಡಿದ್ದರಿಂದ ಆವರಣದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಸ ಸಂಗ್ರಹವಾಗಿತ್ತು. ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಸ್ವಯಂಪ್ರೇರಣೆಯಿಂದ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಪಠ್ಯದ ಜ್ಞಾನದ ಜೊತೆಗೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಸ್ವಚ್ಛತೆ ಕೇವಲ ಒಂದು ದಿನದ ಕಾರ್ಯವಾಗದೆ ಪ್ರತಿಯೊಬ್ಬರ ಜೀವನದ ಭಾಗವಾಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಶಿಬಿರಾರ್ಥಿಗಳೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಂಡು, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡಿದರು. ಶಿಬಿರಾರ್ಥಿಗಳ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಲ್ಲಹಳ್ಳಿಯಲ್ಲಿ ನಡೆದ ಎನ್‌ಎಸ್‌ಎಸ್ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಬಡಿಗೇರ.
ಏಳು ದಿನಗಳ ಶಿಬಿರದಲ್ಲಿ ಪ್ರತಿನಿತ್ಯ ವಿಶೇಷ ಉಪನ್ಯಾಸ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಹಿರಿಯರು ಶಿಬಿರಾರ್ಥಿಗಳ ಕಾರ್ಯವನ್ನು ಪ್ರಶಂಸಿಸಿದರು.
ಶಿಬಿರದ ಕಾರ್ಯಕ್ರಮಾಧಿಕಾರಿ ಬಸವರಾಜ ನರವಾಡೆ ಅವರು ಕಾಲೇಜಿನ ಪ್ರಾಚಾರ್ಯ ಎಸ್.ಬಿ. ಮುಂಡಗನೂರ, ಸಿಬಿಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಉಪನ್ಯಾಸಕರು, ಗ್ರಾಮಸ್ಥರು ಮತ್ತು ಶಿಬಿರದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.




